ಕೊಣಾಜೆ, ಏ 13(SM): ಮಂಗಳೂರಿನಲ್ಲಿ ಏಪ್ರಿಲ್ ೧೩ರ ಶನಿವಾರ ಸಂಜೆ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡಿದಿದೆ.
ಕೊಣಾಜೆ ಠಾಣಾ ವ್ಯಾಪ್ತಿಯ ಕುತ್ತಾರು ಬಳಿ ಅಪಘಾತ ನಡೆದ ಬಳಿಕ ಎರಡು ತಂಡಗಳ ನಡುವೆ ಘರ್ಷಣೆ ಉಂಟಾಗಿತ್ತು. ಇದೇ ವೇಳೆ ಕಲ್ಲು ತೂರಾಟ ಕೂಡ ನಡೆದಿತ್ತು. ಮಹಿಳೆಯರು ಪ್ರಯಾಣಿಸುತ್ತಿದ್ದ ಬಸ್ ಗಳ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಲವು ಯುವಕರು ಮಹಿಳೆಯರಿದ್ದ ಬಸ್ಸಿನೊಳಗೆ ನುಗ್ಗಿದ್ದಾರೆ. ಬಸ್ ನೊಳಗಡೆ ಕುಳಿತಿದ್ದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಯಾಣಿಕ ಮಹಿಳೆಯರು ಆರೋಪಿಸಿದ್ದಾರೆ.
ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಕೂಡ ನಡೆದಿದೆ.
ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಸ್ಥಳಕ್ಕೆ ಮಂಗಳೂರು ಕಮಿಷನರ್ ಸಂದೀಪ್ ಪಾಟೀಲ್ ಭೇಟಿ ನೀಡಿದ್ದಾರೆ. ಹಾಗೂ ಧರಣಿ ನಿರತ ಬಿಜೆಪಿ ಕಾರ್ಯಕರ್ತರ ಜತೆ ಮಾತುಕತೆ ನಡಿಸಿದರು. ಹಾಗೂ ಆರೋಪಿಗಳನ್ನು ಶೀಘ್ರ ಬಂಧಿಸಲು ಕ್ರಮ ಕೈಗೊಳ್ಳಲಾಗುವುದೆಂದು ಅವರು ಭರವಸೆ ನೀಡಿದ್ದಾರೆ. ಇನ್ನು ಘಟನೆಯಲ್ಲಿ ಇತ್ತಂಡಗಳ ಒಟ್ಟು ನಾಲ್ವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಮಿಷನರ್ ಭರವಸೆಯ ಬಳಿಕ ಕಾರ್ಯಕರ್ತರು ಸ್ಥಳದಿಂದ ತೆರಳಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದು ಬಂದೋಬಸ್ತ್ ಕೈಗೊಳ್ಳಲಾಗಿದೆ.
ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರೆಸಲಾಗಿದೆ.