ಉಡುಪಿ, ಏ 15(SM): ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲು 72 ಗಂಟೆ ಬಾಕಿ ಇದ್ದು, ಜಿಲ್ಲೆಯಲ್ಲಿ ಶಾಂತಿಯುತ ಮತ್ತು ವ್ಯವಸ್ಥಿತ ಮತದಾನ ನಡೆಯಲು ಮತ್ತು ಮತದಾರರಿಗೆ ಯಾವುದೇ ಆಮಿಷಗಳನ್ನು ನೀಡಿ, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಯಾವುದೇ ರೀತಿಯ ಮಾದರಿ ನೀತಿ ಸಂಹಿತೆಗೆ ಉಲ್ಲಂಘನೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದರು. ಮತದಾರರಿಗೆ ಆಮಿಷ ನೀಡುವುದು, ಮತಗಟ್ಟೆಯ 100 ಮೀಟರ್ ಒಳಗೆ ಪ್ರಚಾರ ಮಾಡುವುದು, ಮತದಾರರಿಗೆ ವಾಹನ ಸೌಲಭ್ಯ ಒದಗಿಸುವುದು, 48 ಗಂಟೆಯ ಒಳಗೆ ಸಾರ್ವಜನಿಕ ಸಭೆ ಸಮಾರಂಭ ನಡೆಸುವುದು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಡಿಸಿ ಹೇಳಿದರು.
ಚುನಾವಣಾ ಪ್ರಚಾರ, ಸಭೆ ಇತ್ಯಾದಿಗಳಿಗೆ ಕ್ಷೇತ್ರದ ಹೊರಗಿನಿಂದ ಕರೆತಂದಿರುವ ಹಾಗೂ ಕ್ಷೇತ್ರದ ಮತದಾರರಲ್ಲದ ರಾಜಕೀಯ ಗಣ್ಯ ವ್ಯಕ್ತಿಗಳು, ಪ್ರಚಾರಕರು, ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಕ್ಷೇತ್ರದಿಂದ ಹೊರಗೆ ಹೋಗಬೇಕು. ಮತದಾನಕ್ಕೆ ಅಡ್ಡಿಪಡಿಸುವ ವ್ಯಕ್ತಿಗಳು ಕಂಡು ಬಂದಲ್ಲಿ ಮಾಹಿತಿ ನೀಡಿ, ಯಾವುದೇ ಮನೆಗಳಲ್ಲಿ ರಾಜಕೀಯ ಸಭೆಗಳು ನಡೆಯುತ್ತಿದ್ದರೆ, ಮದ್ಯ ಹಂಚುತ್ತಿದ್ದರೆ, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದರೆ, ಸಾಮೂಹಿಕ ಭೋಜನ ವ್ಯವಸ್ಥೆ ಮಾಡುವವರ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕಾರಿಗಳು ತಕ್ಷಣವೇ ಬಂದು ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಿದ್ದಾರೆ ಎಂದು ಡಿಸಿ ತಿಳಿಸಿದರು.