ಮಂಗಳೂರು, ಏ 15(SM): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 18ರಂದು ನಡೆಯಲಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ವ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಒಟ್ಟು 883 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 220 ಸೂಕ್ಷ್ಮ ಮತಗಟ್ಟೆ ಮತ್ತು 663 ಸಾಮಾನ್ಯ ಮತಗಟ್ಟೆಗಳಾಗಿವೆ. ನಗರದ ಆಯ್ದ ಸೂಕ್ಷ್ಮ ಸ್ಥಳಗಳಲ್ಲಿ ವಿಧಾನ ಸಭಾ ಕ್ಷೇತ್ರವಾರು 3 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಒಟ್ಟು 12 ಸಿಎಆರ್ ತುಕಡಿ ಬಂದೋಬಸ್ತ್ ಮಾಡಲಾಗಿದೆ ಎಂದರು.
ಇನ್ನು 7 ಮಂದಿ ಡಿವೈಎಸ್ಪಿ, ಎಸಿಪಿ, 16 ಪಿಐ, 37 ಪಿಎಸ್ಐಗಳನ್ನು ಸೇರಿದಂತೆ ಒಟ್ಟು 1500 ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.