ಮಂಗಳೂರು, ಎ26(Daijiworld News/SS): ಲಕ್ಷದ್ವೀಪ ಸೇರಿದಂತೆ ಕೇರಳ ಕರಾವಳಿ ಸಮುದ್ರದಲ್ಲಿ ಏ.29ರವರೆಗೆ ಭಾರಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆ ಭಾಗಕ್ಕೆ ಮೀನುಗಾರಿಕೆಗೆ ತೆರಳಿರುವ ಕರ್ನಾಟಕ ಕರಾವಳಿಯ ಮೀನುಗಾರರೂ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಕರಾವಳಿಯಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮೀನುಗಾರರು ಏ.28ಕ್ಕೆ ಮೊದಲು ಹಿಂತಿರುಗುವಂತೆ ಸೂಚನೆ ರವಾನಿಸಿದೆ.
ಹಿಂದು ಮಹಾಸಾಗರ, ಆಗ್ನೇಯ ಬಂಗಾಳಕೊಲ್ಲಿಯಲ್ಲಿ ನಿಮ್ನೊತ್ತಡ ಪ್ರದೇಶ ನಿರ್ಮಾಣವಾಗಿರುವುದರಿಂದ, ಇದು ಸೈಕ್ಲೋನ್ ಆಗಿ ಪರಿವರ್ತನೆಗೊಂಡು ಏ.28ರ ಬಳಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಭಾಗಗಳಲ್ಲಿ ಭಾರಿ ಗಾಳಿ ಸಹಿತ ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗಲಿದೆ. ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಸಿಡಿಲು-ಮಿಂಚು ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಏ.27 ಮತ್ತು 28ಕ್ಕೆ ಮೋಡ ಕವಿದ ವಾತಾವರಣ ಇರಲಿದ್ದು, 29 ಮತ್ತು 30ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೇರಳದ ಕರಾವಳಿಯಲ್ಲಿ ಮುಂದಿನ ದಿನಗಳಲ್ಲಿ ರಾತ್ರಿ ವೇಳೆ ಬಿರುಸಿನ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ದಿನಗಳಲ್ಲಿ ಮೀನುಗಾರಿಕೆಗೆ ಸಮುದ್ರಕ್ಕಿಳಿಯಬಾರದು. ಈಗಾಗಲೇ ಸಮುದ್ರಕ್ಕೆ ತೆರಳಿದ ಮಂದಿ ತಕ್ಷಣ ವಾಪಸಾಗುವಂತೆ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಮುನ್ಸೂಚನೆ ನೀಡಿದ್ದಾರೆ.