ಉಡುಪಿ, ಮೇ04(Daijiworld News/SS): 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವು ದೊರೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಅವಲೋಕನ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ದೇಶದಲ್ಲಿ ಒಟ್ಟು 300ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಮಾತ್ರವಲ್ಲ, ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿಯೂ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ದೊರೆಯಲಿದೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಿ ದೇಶದ ಭದ್ರತೆ ಮತ್ತು ಅಭಿವೃದ್ಧಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಲಿದ್ದಾರೆ. ಮೋದಿ ಅಲೆ ಮತದಾರರು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ ಎಂದು ಎಂದು ಹೇಳಿದರು.
ಕೆಲವೊಂದು ಅನಿರೀಕ್ಷಿತ ಬೆಳವಣಿಗೆಗಳ ನಡುವೆಯೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆಗೈದಿದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಉತ್ತಮ ಲೀಡ್ ತೆಗೆದುಕೊಳ್ಳುವ ವಾತಾವರಣವಿದೆ. ಚುನಾವಣೆ ಒಂದು ಯುದ್ಧ. ಯುದ್ಧವನ್ನು ಗೆಲ್ಲಲೇಬೇಕೆಂಬ ಪಣ ತೊಟ್ಟು ಕಾರ್ಯಕರ್ತರು ಹೋರಾಟ ಮಾಡಿದ್ದಾರೆ ಎಂದು ತಿಳಿಸಿದರು.