ಮಂಗಳೂರು, ಮೇ 10 (Daijiworld News/SM): ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗುರಿ ಆಂಜೆಲೋರ್ ಚರ್ಚ್ ನ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಿಡ್ಡೇಲ್ ಗೋಕರ್ಣ ನಿವಾಸಿ ಹರ್ಷಿತ್ ಶೆಟ್ಟಿ(25) ಮತ್ತು ಹವಿತ್ ಪೂಜಾರಿ(24) ಬಂಧಿತ ಆರೋಪಿಗಳು. ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಜಂಕ್ಷನ್ ನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಗಳ ಪೈಕಿ ಹರ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಹಾಗೂ ದರೋಡೆಗೆ ಯತ್ನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಪ್ರಕರಣ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣಗಳು ದಾಖಲಾಗಿವೆ.
ಇನ್ನೊರ್ವ ಆರೋಪಿ ಹವಿತ್ ಪೂಜಾರಿ ಎಂಬಾತನ ವಿರುದ್ದ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣಗಳು ದಾಖಲಾಗಿವೆ.
ಇನ್ನು ಆರೋಪಿಗಳು ದರೋಡೆ ಮಾಡಿದ ಚಿನ್ನದ ಕರಿಮಣಿ ಸರ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಮೋಟಾರ್ ಸೈಕಲ್ ನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.