ಹಾಸನ ನ 22: ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಬಸ್ ಸುಟ್ಟು ಸಂಪೂರ್ಣ ಕರಕಲಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದ ಈ ಬಸ್ ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಂಚಟಹಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದಾಗ ತಡರಾತ್ರಿ ಈ ಅವಘಡ ಸಂಭವಿಸಿದೆ. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ತಕ್ಷಣವೇ ಚಾಲಕರ ಗಮನಕ್ಕೆ ಬಂದಿದೆ. ಕೂಡಲೇ ಅವರು ಬಸ್ಸನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಆದ್ದರಿಂದ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ಘಟನೆ ಸಂಬಂಧಿಸಿದಂತೆ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾಂತ್ರಿಕ ದೋಷದಿಂದ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ.