ಬೆಳ್ತಂಗಡಿ, ಮೇ.20(Daijiworld News/SS): ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಸುಮಾರು ಸಾವಿರಾರು ಭಕ್ತರು ನೀರಿನ ತೀವ್ರ ಕೊರತೆ ಎದುರಿಸುತ್ತಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಹೆಗ್ಗಡೆ ಅವರು ಈ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ತೀವ್ರಗೊಂಡ ಬೆನ್ನಲ್ಲೇ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚೆಕ್ ಡ್ಯಾಂ ನಿರ್ಮಾಣದ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿದೆ.
ಈ ಹಿಂದೆ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು, 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ತಮ್ಮ ಕಳವಳವನ್ನು ಹೊರಹಾಕಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗಡೆ ಅವರ ಹೇಳಿಕೆ ಬೆನ್ನಲ್ಲೇ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಕುರಿತು ಗಂಭೀರ ಆಲೋಚನೆಯಲ್ಲಿ ತೊಡಗಿದೆ.
ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕೆ ಸಲಹೆ ಮೇರೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಧರ್ಮಸ್ಥಳದಲ್ಲಿರುವ ನೀರಿನ ಅಭಾವದ ಬಗ್ಗೆ ಚರ್ಚೆ ಮಾಡಿದ್ದಾರೆ.
ಶ್ರೀ ಕ್ಷೇತ್ರದಲ್ಲಿ ಇನ್ನೊಂದು ಚೆ ಕ್ಡ್ಯಾಂ ನಿರ್ಮಾಣ ಮಾಡಿಕೊಡುವಂತೆ ಶ್ರೀ ಹೆಗ್ಗಡೆಯವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದ.ಕ. ಜಿ.ಪಂ. ಸಿಇಒ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.