ಮಂಗಳೂರು ಮೇ 23 (Daijiworld News/MSP): 2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯ ಮುಂದೆ ಮಹಾಘಟಬಂಧನ ಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಮುನ್ನಡೆ ಸಾಧಿಸಿದೆ.
ಕರ್ನಾಟಕಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಕೇವಲ ಆರು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಜಿದ್ದಾಜಿದ್ದಿನ ಕ್ಷೇತ್ರವೆಂದೇ ಬಿಂಬಿತವಾದ ಮಂಡ್ಯ ಕ್ಷೇತ್ರದಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಗನಾದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತ ಅಂಬರೀಶ್ ಸಮಬಲದ ಪೈಪೋಟಿ ನಿಡುತ್ತಿದ್ದಾರೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿ ಮುಂದಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದೆ ಶೋಭ ಕರಂದ್ಲಾಜೆ ಜಯಗಳಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ದೋಸ್ತಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗೆ ತೀವ್ರ ಹಿನ್ನಡೆಯಲ್ಲಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್ಕುಮಾರ್ ಕಟೀಲ್ ಭಾರೀ ಮುನ್ನಡೆಯತ್ತ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆಯಾಗಿದೆ.
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾರೀ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಧ್ಯದ ಮಾಹಿತಿ ಪ್ರಕಾರ ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಕಲ್ಬುರ್ಗಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರು ಮುನ್ನಡೆ ಸಾಧಿಸಿದ್ದಾರೆ. ಇದಲ್ಲದೆ ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಎಚ್.ಮುನಿಯಪ್ಪ , ಡಾ.ವೀರಪ್ಪ ಮೊಯ್ಲಿ ಹಿನ್ನಡೆಯಾಗಿದೆ.
ಬೆಂಗಳೂರಿನಲ್ಲಿ ಮೂರು ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದರೆ, ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಹರ್ಷದ್ ಅವರು ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ವಿರುದ್ಧ ಮುನ್ನಡೆ ಸಾಧಿಸಿದ್ದರು.ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಮುನ್ನಡೆ ಸಾಧಿಸಿದ್ದಾರೆ.