ಬೆಂಗಳೂರು, ಆಗಸ್ಟ್ 17, (DaijiworldNews/TA) : ಮುಂದಿನ ನಾಲ್ಕು ವಾರಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಚರ್ಚೆಸಿದರು.
ರಾಜ್ಯದಲ್ಲಿ ಜೂನ್ 1 ರಿಂದ ಆಗಸ್ಟ್ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ, ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ.
ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇದರ ಜೊತೆಗೆ ಸಭೆಯಲ್ಲಿ ಪ್ರಕೃತಿ ವಿಕೋಪದಿಂದ ಜನರಿಗೆ ಆದ ನಷ್ಟದ ಬಗ್ಗೆ ಚರ್ಚಿಸಲಾಯಿತು. ಜೊತೆಗೆ ಪರಿಹಾರ ವಿತರಣೆಯ ಕ್ರಮದ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.