ಬೆಂಗಳೂರು, ಆ 17 (DaijiworldNews/MS): ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದು, ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ದಿಢೀರ್ ಪ್ರತಿಭಟನೆಗಳು ನಡೆದಿವೆ.
ಬೆಂಗಳೂರಿನ ರಾಜಭವನದ ಎದುರು ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ನಡೆಸಬೇಕಾಯಿತು.
ಪ್ರತಿಭಟನಾಕಾರರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಜೊತೆಗೆ ಬಿಜೆಪಿ ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಕಾರ್ಯಕರ್ತರು ರಾಜಭವನದ ಬಳಿ ಬರುವುದನ್ನು ತಡೆದರು.