ಬೆಂಗಳೂರು, ಆ.19(DaijiworldNews/AA): ರಾಜ್ಯಪಾಲರು ಸಂವಿಧಾನದ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಒಂದು ವೇಳೆ ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆಯಾಗುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಮೂಡ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಪಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ವಿರುದ್ಧ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇಂದು ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಮೀರ್ ಅಹ್ಮದ್ ಅವರು, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಕಾಲದಲ್ಲಿಯೇ 14 ಸೈಟ್ ನೀಡಲಾಗಿದೆ. ಸಿದ್ದರಾಮಯ್ಯ ಅವರ ಪ್ರಸಿದ್ಧಿ ಸಹಿಸಲಾಗದೇ, ಸರ್ಕಾರ ಉರುಳಿಸುವ ಯತ್ನ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಜನ ಎಂದಿಗೂ ಬಹುಮತ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಸಿಎಂ ಆಗಿದ್ದಾಗ ಜೈಲಿಗೆ ಹೋಗಿದ್ದರು. ಯಾವ ದೂರು ಆಧರಿಸಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಿರಿ? ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಲೋಕಾಯುಕ್ತರು ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿದ್ದಾರೆ. ಅದಕ್ಕೆ ನೀವು ಯಾಕೆ ಅನುಮತಿ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಮಗೆ ನ್ಯಾಯಾಲಯದ ಮೇಲೆ ವಿಶ್ವಾಸವಿದೆ. ಬಿಜೆಪಿ, ಜೆಡಿಎಸ್ ಏನೇ ಮಾಡಿದರೂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಸಲು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್ ಹೈಕಮಾಂಡ್, ರಾಜ್ಯದ 7 ಕೋಟಿ ಜನ ಸಿಎಂ ಪರವಾಗಿದ್ದಾರೆ. ಕರ್ನಾಟಕದ ಜನ ಸುಮ್ಮನೆ ಕೂರಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.