ಚಿತ್ರದುರ್ಗ, ಆ 19 (DaijiworldNews/MS): ರಾಜ್ಯ ಕಾಂಗ್ರೆಸ್ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಪ್ರತಿಪಕ್ಷವಾಗಿ ಬಿಜೆಪಿ ತನ್ನ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸರಣಿ ಭ್ರಷ್ಟಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಡಾ ಹಗರಣ ಆರೋಪದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಆದರೆ ಅವರು ರಾಜ್ಯಪಾಲರ ನಿರ್ಧಾರವನ್ನು ಟೀಕಿಸುವ ಮೂಲಕ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡುತ್ತಿದ್ದಾರೆ ಎಂದರು.
ಬಜೆಟ್ ನಲ್ಲಿ ಅನುಸೂಚಿತ ಸಮುದಾಯಗಳಿಗೆ ಮೀಸಲಿಟ್ಟ ಹಣವನ್ನು ಖಾತರಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಆ ವರ್ಗಕ್ಕೆ ಅನ್ಯಾಯವೆಸಲಾಗಿದೆ ಎಂದು ಆರೋಪಿಸಿದರು. ಸಂಸದ ಗೋವಿಂದ ಕಾರಜೋಳ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.