ಅಮರಾವತಿ, ಆ.21(DaijiworldNews/AK): ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ತಿಳಿಸಿದ್ದಾರೆ.
ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್ಟಿಆರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕಾರ್ಮಿಕರು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ.
ಘಟನೆ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಗೊಂಡಿದ್ದಾರೆ.