ಬೆಂಗಳೂರು, ಆ.28(DaijiworldNews/TA):ನ್ಯಾಯಾಲಯದ ಆದೇಶದ ನಂತರವೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಸಿಲ್ಲ. ಈ ಕಾರಣದಿಂದಾಗಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಧರಣಿ ನಡೆಸಿದ್ದಾರೆ. ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕೂಡ ಭೇಟಿ ನೀಡಿ ಶಾಸಕ ಯತ್ನಾಳ್ ಗೆ ಸಾಥ್ ನೀಡಿದರು.
ಕಲಬುರಗಿಯ ಚಿಂಚೋಳಿ ತಾಲೂಕಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಇದೆ. ಈ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ ಉತ್ಪಾದನೆ ಮಾಡಲಾಗುತ್ತದೆ. ಎಥೆನಾಲ್ ಉತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ಲೈಸೆನ್ಸ್ ನವೀಕರಣ ಆಗಿಲ್ಲ ಎಂಬುವುದಾಗಿ ಕಾರಣ ಹೇಳಿ ಮಂಡಳಿ ಕಾರ್ಖಾನೆಯನ್ನು ಮುಚ್ಚಿಸಿತ್ತು.
ಮಂಡಳಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೆಲವು ದಿನಗಳ ಹಿಂದೆ ನ್ಯಾಯಾಲಯ ಕಾರ್ಖಾನೆ ತೆರೆಯಲು ಆದೇಶ ನೀಡಿತ್ತು. ಆದರೆ ಆದೇಶವನ್ನು ಪಾಲಿಸದೇ ಮಂಡಳಿಯು ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದೆ ಎಂದು ಹೇಳಲಾಗಿದೆ. ಆದರೆ, ನ್ಯಾಯಾಲಯದ ಆದೇಶದಂತೆ ಕಾರ್ಖಾನೆ ತೆರಯಬೇಕು ಎಂಬುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಡರಾತ್ರಿ ಮಂಡಳಿ ಕಚೇರಿಯಲ್ಲಿ ಧರಣಿ ನಡೆಸಿದ್ದಾರೆ.