ಬೆಂಗಳೂರು, ಆ.28(DaijiworldNews/AA): ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್ಐಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ ಹೈಕೋರ್ಟ್ ಎಸ್ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಈ ಮೂಲಕ ಹೆಚ್ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಇನ್ನು ಈ ಪ್ರಕರಣದ ಆರೋಪಿಗಳಾದ ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ ಈಗಾಗಲೇ ಜಾಮೀನು ದೊರೆತಿದೆ.
ಸಂತ್ರಸ್ತ ಮಹಿಳೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರಿಗೆ ಮೇ 13ರಂದು ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ಬಳಿಕ ಎಸ್ಐಟಿ ವಿಶೇಷ ಕೋರ್ಟ್ನ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು, ರೇವಣ್ಣಗೆ ನೀಡಲಾಗಿರುವ ಜಾಮೀನು ರದ್ದು ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಆದರೆ ಇದೀಗ ಕೋರ್ಟ್ ಜಾಮೀನು ರದ್ದುಗೊಳಿಸಲು ನಿರಾಕರಿಸಿದೆ.