ಬೆಂಗಳೂರು, ಆ.29(DaijiworldNews/AK):ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಈ ಹಿಂದೆ ನ್ಯಾಯಾಲಯದಿಂದ ತಾತ್ಕಾಲಿಕ ಪರಿಹಾರ ಪಡೆದಿದ್ದರು. ಆಗಸ್ಟ್ 29ರವರೆಗೆ ಯಾವುದೇ ತೀರ್ಮಾನ ಕೈಗೊಳ್ಳದಂತೆ ಕೆಳ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು.
ಆಗಸ್ಟ್ 17 ರಂದು ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ನೀಡಿದರು. ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರ ರಿಟ್ ಅರ್ಜಿಯ ನಂತರ, ಹೈಕೋರ್ಟ್ ಆಗಸ್ಟ್ 19 ರಂದು ವಿಚಾರಣೆಗೆ ಈ ವಿಷಯವನ್ನು ಕೈಗೆತ್ತಿಕೊಂಡಿತು. ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು. ಮುಖ್ಯಮಂತ್ರಿಗಳು ಮಧ್ಯಂತರ ಪರಿಹಾರ ಹಾಗೂ ರಾಜ್ಯಪಾಲರ ಆದೇಶವನ್ನು ಅಸಂವಿಧಾನಿಕ ಎಂದು ಕರೆದು ರದ್ದುಗೊಳಿಸುವಂತೆ ಕೋರಿದ್ದಾರೆ.
ಒಂದು ವೇಳೆ ಇಂದು ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ಮನ್ನಿಸಿದರೆ ಅವರಿಗೆ ಅದು ಅತೀ ದೊಡ್ಡ ಜಯವಾಗಲಿದೆ. ಆದರೆ, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಎತ್ತಿ ಹಿಡಿದರೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಲಿದೆ.
ಮತ್ತೊಂದೆಡೆ ಅರ್ಜಿದಾರರಾದ ಟಿ.ಜೆ. ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್ಪಿ ಪ್ರದೀಪ್ ಕುಮಾರ್ ಅವರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಪಡೆಯುವ ವಿಶ್ವಾಸದಲ್ಲಿದ್ದಾರೆ.