ನವದೆಹಲಿ, ಆ.30(DaijiworldNews/TA):ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಶುಕ್ರವಾರ ಪ್ರಕಟಿಸಿದೆ. ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಭೇಟಿ ನಿರ್ಣಾಯಕವಾಗಲಿದೆ.
"ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 4 ಮತ್ತು ಸೆಪ್ಟೆಂಬರ್ 5, 2024 ರಂದು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
"ನಾಯಕರು ಭಾರತ-ಸಿಂಗಾಪುರ್ ಕಾರ್ಯತಂತ್ರದ ಸಹಭಾಗಿತ್ವದ ಪ್ರಗತಿಯನ್ನು ಪರಿಶೀಲಿಸುತ್ತಾರೆ ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಪ್ರಧಾನ ಮಂತ್ರಿಗಳು ಸಿಂಗಾಪುರದ ಅಧ್ಯಕ್ಷ ಎಚ್.ಇ ಶ್ರೀ ಥರ್ಮನ್ ಷಣ್ಮುಗರತ್ನಂ ಅವರನ್ನು ಭೇಟಿ ಮಾಡುತ್ತಾರೆ. ಮತ್ತು ಸಿಂಗಾಪುರದ ನಾಯಕತ್ವದೊಂದಿಗೆ ಸಂವಾದ ನಡೆಸಲಿದ್ದಾರೆ. ಸಿಂಗಾಪುರದ ಉದ್ಯಮಿಗಳನ್ನು ಭೇಟಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.