ಬೆಂಗಳೂರು, ಆ.31(DaijiworldNews/AA): ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದು ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯವಾಗಿದೆ. ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಮದು ಕಿಡಿ ಕಾರಿದರು.
ಹಿಂದೆ ಬಿ.ಎಸ್.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್ ಕಚೇರಿಯಾಗಿತ್ತೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ರಾಜ್ಯಪಾಲರು ತಮ್ಮ ಮುಂದಿರುವ ಇತರೆ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ 'ರಾಜಭವನ ಚಲೋ' ನಡೆಸಿದರು. ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಶಾಸಕರ ನಿಯೋಗ, ಪ್ರಾಸಿಕ್ಯೂಷನ್ ಅನುಮತಿ ಕೇಳಿ ಬಾಕಿ ಇರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಡಿಸಿಎಂ ಮುರುಗೇಶ್ ನಿರಾಣಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಜನಾರ್ದನ ರೆಡ್ಡಿ ಅವರ ೪ ಪ್ರಕರಣಗಳ ಅರ್ಜಿಗಳನ್ನ ಇತ್ಯರ್ಥ ಮಾಡುವಂತೆ ಮನವಿ ಸಲ್ಲಿಸಿತು.