ಲಕ್ನೋ, ಸೆ.8(DaijiworldNews/AA): ಟ್ರಾನ್ಸ್ಪೋರ್ಟ್ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಶನಿವಾರ ಸಂಜೆ 5 ಗಂಟೆ ಸುಮಾರಿಗೆ 3 ಅಂತಸ್ತಿನ ಕಟ್ಟಡ ಕುಸಿದಿತ್ತು. ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಲಾಗುತ್ತಿತ್ತು. ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲವು ನಿರ್ಮಾಣ ಕಾರ್ಯ ನಡೆಯುತ್ತಿದ್ದವು. ಸುಮಾರು ನಾಲ್ಕು ವರ್ಷಗಳ ಹಿಂದೆ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.
ಈ ಅವಘಡದಲ್ಲಿ 28 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಜೊತೆಗೆ ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್ಡಿಆರ್ಎಫ್) ರಕ್ಷಣಾ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಘಟನೆ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವುದರ ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.