ಬೆಳಗಾವಿ, ಸೆ.10(DaijiworldNews/AK): ರಾಜ್ಯದಲ್ಲಿ ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರ ಮುಳುಗಿ ಹೋಗಿದೆ. ರಾಜ್ಯ ಸರಕಾರ ತನ್ನ ತಪ್ಪಿನಿಂದ ಪತನಗೊಳ್ಳಲಿದೆ ಎಂದು ಸಂಸದ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆದಿದೆ. ಇಲ್ಲಿಯವರೆಗೂ ಒಳಗಡೆ ನಡೆಯುತ್ತಿದ್ದ ಚರ್ಚೆ ಈಗ ಬಹಿರಂಗವಾಗಿ ನಡೆಯುತ್ತಿದೆ ಎಂದು ಹೇಳಿದರು.
ಒಳಗಡೆ ನಾವು ಸಿದ್ದರಾಮಯ್ಯ ಅವರ ಪರವಾಗಿದ್ದೇವೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಸಚಿವರು, ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಆದರೆ ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿ ನಡೆಯುತ್ತಿದೆ ಎಂದು ಹೇಳಿದರು.