ನವದೆಹಲಿ, ಸೆ.17(DaijiworldNews/AK): ಆಮ್ ಆದ್ಮಿ ಪಕ್ಷದ ನಾಯಕರಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅವರಿಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ವೇಳೆ ಹೊಸ ಸರ್ಕಾರ ರಚನೆಗೆ ಅತಿಶಿ ಹಕ್ಕು ಮಂಡಿಸಿದರು. ಸೆ. 15 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು.
ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. ಕೇಜ್ರಿವಾಲ್ ಅವರ ಉನ್ನತ ಸ್ಥಾನಕ್ಕೆ ರಾಜೀನಾಮೆ ಬಳಿಕ ದೆಹಲಿ ಸಚಿವೆ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ.
ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಸೆಪ್ಟೆಂಬರ್ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.