ಬೆಂಗಳೂರು, ಸೆ.18 (DaijiworldNews/AK): ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಅಲ್ಲಾಡುತ್ತಿರುವ ಸಂದರ್ಭದಲ್ಲಿ ಕುರ್ಚಿ ಉಳಿಸಿಕೊಳ್ಳಲು ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎಐಸಿಸಿ) ಅಧ್ಯಕ್ಷರನ್ನು ಓಲೈಸಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಚಿವ ಸಂಪುಟ ಸಭೆಯ ನಾಟಕ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ಕಲಬುರ್ಗಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿನ್ನೆ ಆಗಿರುವ ಸಚಿವ ಸಂಪುಟ ಸಭೆಯಿಂದ ಈ ಭಾಗದ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ಈ ಭಾಗಕ್ಕೆ 5 ಸಾವಿರ ಕೋಟಿ ಕೊಡುತ್ತೇವೆ; ಇಲ್ಲಿ ಶಾಲಾ ಕಾಲೇಜು ಮಾಡುತ್ತೇವೆ. 1,100 ಕೋಟಿಯ ಪ್ಯಾಕೇಜ್ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇದರಲ್ಲಿ ಹೊಸದೇನೂ ಇಲ್ಲ ಎಂದು ಟೀಕಿಸಿದರು.
ಒಂದು ವರ್ಷದ ಹಿಂದೆ ಕೂಡ ಇದೇ ಮಾತುಗಳನ್ನು ಹೇಳಿದ್ದರು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ ಎಂದು ಆಕ್ಷೇಪಿಸಿದರು.ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 1,500 ಕೋಟಿ ಕೊಟ್ಟಿದ್ದರು. ತದನಂತರ ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರಕಾರವು 3 ಸಾವಿರ ಕೋಟಿ ಮತ್ತು ಬಜೆಟ್ನಲ್ಲಿ 5 ಸಾವಿರ ಕೋಟಿ ಅನುದಾನ ಪ್ರಕಟಿಸಿತ್ತು. ಅದನ್ನೇ ಸಿದ್ದರಾಮಯ್ಯನವರು ನಿನ್ನೆ ಪುನರುಚ್ಚಾರ ಮಾಡಿದ್ದಾರೆಯೇ ಹೊರತು, ಯಾವುದೇ ಹೊಸ ವಿಚಾರಗಳನ್ನು ಹೇಳಿಲ್ಲ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳು ರಾಜ್ಯಕ್ಕೆ ಮುಖ್ಯಮಂತ್ರಿಯೇ ಅಥವಾ ಕೇವಲ ಬೆಂಗಳೂರು, ಮೈಸೂರಿನ ಸಿಎಂ ಆಗಿದ್ದಾರೆಯೇ ಎಂದು ಜನರು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಅಥವಾ ಯಾವುದೇ ಸಚಿವರು ಇವತ್ತು ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪ್ರವಾಸ ಮಾಡುತ್ತಿಲ್ಲ. ಏನು ಅಭಿವೃದ್ಧಿ ಆಗಬೇಕೆಂದು ಚಿಂತನೆ ಮಾಡುತ್ತಿಲ್ಲ; ಅನುದಾನವನ್ನೂ ಕೊಡುತ್ತಿಲ್ಲ. ಕೇವಲ ಚುನಾವಣೆ ಬಂದಾಗ ಭಾಷಣ ಮಾಡುವುದಕ್ಕಷ್ಟೇ ಸೀಮಿತರಾಗಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.