ಬೆಂಗಳೂರು, ಸೆ.23(DaijiworldNews/AA): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕೇಸಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸಲಿದೆ.
ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ವಾದ ಮಂಡಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ವಾದಿಸಿದ್ದರು. ಅಲ್ಲದೇ ದೂರುದಾರರಾದ ಟಿಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು. ವಕೀಲರೆಲ್ಲರ ವಾದ ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದರು.