ಬೆಂಗಳೂರು, ಅ.01(DaijiworldNews/AA): ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮುಡಾದಿಂದ ಪಡೆದ ಸೈಟುಗಳನ್ನು ವಾಪಸ್ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು, ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ 'ದೊಡ್ದ' ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ ಎಂದು ಬರೆದುಕೊಂಡಿದ್ದಾರೆ.
ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಅವರು ಪೋಸ್ಟ್ ಮಾಡಿದ್ದಾರೆ.