ಮೈಸೂರು, ಅ.06(DaijiworldNews/AA): ಮುಡಾದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ಸಜಿತ್ ವಿರುದ್ಧ ದೂರು ದಾಖಲಾಗಿದೆ.
ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ಸಜಿತ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲಿಖಿತ ದೂರು ನೀಡಿದ್ದಾರೆ.
ಲೋಕಾಯುಕ್ತ ನೀಡಿದ್ದ ಸರ್ಚ್ ವಾರಂಟ್ ಮೇರೆಗೆ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ದಾಳಿ ಮಾಡುವ ಬಗ್ಗೆ ಮೈಸೂರು ಲೋಕಾಯುಕ್ತದ ಅಂದಿನ ಅಧೀಕ್ಷಕ ಸಜಿತ್ ಅವರು ಮೊದಲೇ ಸಚಿವ ಭೈರತಿ ಸುರೇಶ್ ಅವರಿಗೆ ಮಾಹಿತಿ ನೀಡಿದ್ದರು.
ಬಳಿಕ ಭೈರತಿ ಸುರೇಶ್ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ಈ ಕಡತದಲ್ಲಿನ ದಾಖಲೆಗಳನ್ನು ಇಟ್ಟುಕೊಂಡೇ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಈ ರೀತಿ ಸಹಾಯ ಮಾಡಿದ ಕಾರಣಕ್ಕಾಗಿ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಸುಜೀತ್ ಅವರನ್ನು ಬೆಂಗಳೂರಿನ ಆಯಾಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸ್ನೇಹಮಯಿ ಕೃಷ್ಣ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.