ದೆಹಲಿ, ಅ.19(DaijiworldNews/AA): ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಈ ಹಿನ್ನೆಲೆಯಲ್ಲಿ ಎನ್ ಡಿಎ ಅಭ್ಯರ್ಥಿ ಆಯ್ಕೆಗೆ ಎಲ್ಲರೂ ಸೇರಿ ತೀರ್ಮಾನ ಮಾಡಬೇಕಾಗುತ್ತದೆ. ಎರಡು ಮೂರು ದಿನಗಳಲ್ಲಿ ಗೊಂದಲ ಬಗೆಹರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ದೆಹಲಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯದ ವಿಧಾನಸಭೆಯ ಮೂರು ಕ್ಷೇತ್ರಗಳ ಅಭ್ಯರ್ಥಿ ಸಂಬಂಧ ಈಗಾಗಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜೊತೆ ಚರ್ಚೆ ನಡೆಸಲಾಗಿದೆ. ವಿಜಯೇಂದ್ರ ಅವರು, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೂ ಮಾತನಾಡಿದ್ದಾರೆ. ಅಂತಿಮವಾಗಿ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.
ಮುಂದುವರೆದು ವಿಧಾನಸಭೆ ಉಪಚುನಾವಣೆ ನಡೆಯಲಿರುವ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 48 ಉಪಚುನಾವಣೆಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಒಂದೇ ಬಾರಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದರು.