ಬೆಂಗಳೂರು, ಅ.19(DaijiworldNews/AK): ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಈ ಸಂಬಂಧ ವಿಡಿಯೋ ಮೂಲಕ ಮನವಿ ಮಾಡಿರುವ ಅವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.
ಹಸಿರು ಪಟಾಕಿ ಮಾತ್ರವೇ ಬಳಸಿ. ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ ಎಂದರು.