ಬೆಂಗಳೂರು, ಅ.26(DaijiworldNews/AK): ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ ಎಂದು ಪ್ರಕಟಿಸಿದರು. ನಾವು ಹೋರಾಟಕ್ಕೂ ಇಳಿಯುತ್ತೇವೆ; ಆದರೆ, ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಮೊನ್ನೆ ವಿಜಾಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಸದಾ ತುಷ್ಟೀಕರಣ ಮಾಡುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಬೆಂಬಲ ವಕ್ಫ್ ಬೋರ್ಡ್ಗೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಟೀಕಿಸಿದರು.
ಈಗಾಗಲೇ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್ಡಿಎ ಸರಕಾರವು ವಕ್ಫ್ ಕಾಯಿದೆಯಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಇನ್ನೊಂದೆಡೆ ಹೈಕೋರ್ಟ್, ಸುಪ್ರೀಂ ಕೋರ್ಟ್ ಇದ್ಯಾವುದೂ ಇಲ್ಲ; ವಕ್ಫ್ ಹೆಸರು ಹೇಳಿಕೊಂಡು ಯಾರೇನು ಬೇಕಾದರೂ ಲೂಟಿ ಮಾಡಬಹುದು ಎಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆ ಆಗಿದ್ದು, ನಾಮಪತ್ರ ಸಲ್ಲಿಕೆಯೂ ಆಗಿದೆ. ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರಿನಲ್ಲಿ ಯಾವ ರೀತಿ ಆಡಳಿತ ವಿರೋಧಿ ಅಲೆ ಇದೆ; ರಾಜ್ಯ ಸರಕಾರದ ವಿರುದ್ಧ ಜನರು ಯಾವ ರೀತಿ ಹಿಡಿಶಾಪ ಹಾಕುತ್ತಿದ್ದಾರೆ ಎಂಬುದು ಫಲಿತಾಂಶದ ಬಳಿಕ ಗೊತ್ತಾಗಲಿದೆ ಎಂದು ವಿಶ್ಲೇಷಣೆ ಮಾಡಿದರು.
ಉಪ ಚುನಾವಣೆ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಪಕ್ಷದವರು ಅವರ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಷ್ಟವಾಗಲಿದೆ. ಅಂಥ ವಾತಾವರಣ ನಿರ್ಮಾಣ ಆಗಲಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಈಗಾಗಲೇ ಬೊಬ್ಬೆ ಹೊಡೆಯುತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜು ಕಾಗೆಯವರು ಹೇಳಿದ್ದಾರೆ. 8 ಬಾರಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಕೂಡ ಅನುದಾನ ಸಿಗುತ್ತಿಲ್ಲ ಎಂಬ ಮಾತು ಹೇಳಿದ್ದಾರೆ. ಮತ್ತೊಂದೆಡೆ ಬಿ.ಆರ್.ಪಾಟೀಲ್ ಅವರು ಅಧಿಕಾರಿಗಳು ಮಾತು ಕೇಳುತ್ತಿಲ್ಲ ಎಂದಿದ್ದಾರೆ ಎಂದು ವಿವರಿಸಿದರು.
3 ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಿಗೆ ಸರಕಾರವು ಸಂಡೂರಿಗೆ 10 ಸಚಿವರು, ಶಿಗ್ಗಾವಿಗೆ 10 ಸಚಿವರು ಮತ್ತು ಚನ್ನಪಟ್ಟಣದಲ್ಲಿ 10 ಸಚಿವರನ್ನು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 20-30 ಜನ ಶಾಸಕರನ್ನು ನೇಮಿಸಿದೆ. ಹಣದ ಮೂಟೆ ಇಟ್ಟುಕೊಂಡು ಉಪ ಚುನಾವಣೆ ಎದುರಿಸಲು ಸಜ್ಜಾಗುತ್ತಿದ್ದಾರೆಯೇ ಹೊರತು ರಾಜ್ಯದ ಮುಖ್ಯಮಂತ್ರಿಗಳಿಗೆ, ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟ ಕಣ್ಣಿಗೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು.