ಬೆಂಗಳೂರು, ನ.01(DaijiworldNews/AK): ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ -2024 ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ. 1953 ರಲ್ಲಿ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡನಾ ಆಯೋಗ ರಚನೆಯಾಯಿತು. ಆಯೋಗದ ವರದಿಯನ್ನು ಆಧರಿಸಿ ರಾಜ್ಯಗಳ ಭಾಷಾವಾರು ವಿಂಗಡನೆಯಾಧರಿಸಿ, 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು. ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ.
ಈ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ. ಆದರೆ 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು.
ಭಾಷೆಯ ಬಗ್ಗೆ ದುರಭಿಮಾನ ಬೇಡ, ಅಭಿಮಾನಿಗಳಾಗಿ
ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ ,ಇತರರೊಂದಿಗೆ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು. ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ , ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ. ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ. ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ. ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ . ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ. ಬೇರೆ ಭಾಷಾ ಸಂಪತ್ತುನ್ನು ಬೆಳೆಸಿಕೊಳ್ಳಿ , ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ ಎಂದರು.
ಕನ್ನಡ ಹಿಯ್ಯಾಳಿಸುವುದು ನಾಡದ್ರೋಹ ಸರ್ಕಾರದಿಂದ ಕಠಿಣ ಕ್ರಮದ ಎಚ್ಚರಿಕೆ
ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ , ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿಯು ಕಂಡುಬರುತ್ತಿದೆ. ಇದು ನಾಡದ್ರೋಹ ಎಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.