ಹುಬ್ಬಳ್ಳಿ, ನ.04(DaijiworldNews/AK):ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟೀಸು ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟೀಸು ನೀಡಲಾಗಿದೆ ಎಂದು ಜನರಿಗೆ ಅರ್ಥವಾಗಿದೆ.
ನಾನು ಸಚಿವರಾದ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ , ಹಿಂದೂ, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.
ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ . ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟೀಸು ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.
ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಅನುದಾನ ನೀಡಿದ್ದರೆ ರಾಜಕೀಯ ಬಿಟ್ಟುಬಿಡುವೆ:
11495 ಕೋಟಿ ರೂಪಾಯಿಗಳನ್ನ ಕೊಟ್ಟಿದ್ದರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ ಎಂದರು. ಪ್ರಹ್ಲಾದ ಜೋಶಿ ಬಿಡುತ್ತಾರೆಯೇ ಕೇಳಿ ಎಂದು ಪ್ರಶ್ನಿಸಿದರು. ಸುಳ್ಳು ಹೇಳಿದ್ದನ್ನು ಕೇಳಿ ಅದನ್ನು ಬರೆಯುತ್ತೀರಿ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.
ವಕ್ಫ್ ವಿಚಾರವಾಗಿ ಬಿಜೆಪಿ ರಾಜಕಾರಣಕ್ಕಾಗಿ ಪ್ರತಿಭಟನೆ:
ವಕ್ಫ್ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಬಿಜೆಪಿಯವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಾರೆ ಎಂದರು.
ಇಂದು ಮತ್ತು ನಾಳೆ ಎರಡು ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡಲಾಗುವುದು. ಶಿಗ್ಗಾಂವಿ ಕ್ಷೇತ್ರದಲ್ಲಿ ಹಿಂದೆಯೂ ಪ್ರಚಾರ ಮಾಡಿದ್ದೇನೆ. ಕೊನೆಯಲ್ಲಿ ಅಭ್ಯರ್ಥಿಯನ್ನು ನಿಗದಿ ಮಾಡಿದ್ದರಿಂದ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲಾಗಲಿಲ್ಲ. ಈ ಬಾರಿ ಮೂರು ದಿನ ಶಿಗ್ಗಾಂವಿ ಭೇಟಿ ನೀಡುತ್ತಿದ್ದು, ಶಿಗ್ಗಾಂವಿ ಯಲ್ಲಿ ನೂರಕ್ಕೇ ನೂರು ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.