ಬೆಂಗಳೂರು, ನ.04(DaijiworldNews/AK):ಮೈಸೂರಿನ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನವೆಂಬರ್ 25ರವರೆಗೆ ನಡೆದ ತನಿಖೆಯ ವಿವರ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿ, ನ.26ಕ್ಕೆ ವಿಚಾರಣೆ ಮುಂದೂಡಿದೆ.
ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಿದೆ. ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ. ರಾಘವನ್ ವಾದ ಮಂಡಿಸಿ, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದರು.
ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ, ನ.25ರವರೆಗೆ ನಡೆದ ತನಿಖೆಯ ವಿವರ ಒದಗಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ, ಸಿಬಿಐ ಮತ್ತು ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.