ಬೆಂಗಳೂರು, ನ.09(DaijiworldNews/AK):ಕೊರೊನಾ ಕಾಲದ ಪಿಪಿಇ ಕಿಟ್ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ನೇರವಾಗಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದೆ.
ನ್ಯಾಯಮೂರ್ತಿ ಡಿಕುನ್ಹಾ ಸಮಿತಿ ಕಳೆದ ಆಗಸ್ಟ್ ತಿಂಗಳಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಸುಮಾರು 1700ಕ್ಕೂ ಹೆಚ್ಚು ಪುಟಗಳ ತನಿಖಾ ವರದಿಯನ್ನು ಸಂಪುಟ ಉಪಸಮಿತಿ ಅಧ್ಯಯನ ನಡೆಸುತ್ತಿದೆ. ಅದು ನೀಡುವ ವರದಿಯನ್ನು ಸರ್ಕಾರ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ನಾವೇ ಬಯಲುಗೊಳಿಸಿರುವ ಹಗರಣ. ಕೊರೊನಾ ಕಾಲದಲ್ಲಿ ಅಸಹಾಯಕ ಜನರ ನೆರವಿಗೆ ಧಾವಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಿಸಬೇಕಾದ ಹೊಣೆ ಸರ್ಕಾರದ್ದಾಗಿತ್ತು. ಆದರೆ ಜನ ಸರಿಯಾಗಿ ಚಿಕಿತ್ಸೆ ಇಲ್ಲದೆ ಸಾಯುತ್ತಿದ್ದ ಸಂದರ್ಭವನ್ನೂ ಬಳಸಿಕೊಂಡು ದುಡ್ಡು ನುಂಗಲು ಯತ್ನಿಸಿದ್ದನ್ನು ಇಡೀ ಕರ್ನಾಟಕ ಕಂಡಿದೆ..
ಕೊರೊನಾ ಕಾಲದಲ್ಲಿ ಬೆಡ್, ಪಿಪಿಇ, ವೆಂಟಿಲೇಟರ್, ಆಕ್ಸಿಜನ್ ಸಿಲಿಂಡರ್ ನಿಂದ ಹಿಡಿದು ಸ್ಯಾನಿಟೈಸರ್ ಮತ್ತು ಮಾಸ್ಕ್ ವರೆಗೆ ಪ್ರತಿಯೊಂದು ಸಾಮಗ್ರಿ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ದಾಖಲೆಗಳ ಸಮೇತ ಆ ಕಾಲದಲ್ಲಿ ನಾವು ಬಯಲಿಗೆಳೆದಿದ್ದೆವು. ಈ ಬಗ್ಗೆ ನಾನು ಸದನದ ಒಳಗೆ ಮತ್ತು ಹೊರಗೆ ಮಾತನಾಡಿದ್ದೆ. ಆದರೆ ಸರ್ಕಾರ ಅವುಗಳನ್ನೆಲ್ಲ ನಿರಾಕರಿಸುತ್ತಲೇ ತನ್ನ ಭ್ರಷ್ಟಾಚಾರದ ದಂಧೆಯನ್ನು ಮುಂದುವರಿಸಿಕೊಂಡು ಹೋಗಿತ್ತು.
ನಮ್ಮ ದೇಶದಲ್ಲಿರುವ ಕಂಪೆನಿಗಳು ಪಿಪಿಇ ಕಿಟ್ ಗಳನ್ನು 200 ರಿಂದ 300 ರೂಪಾಯಿ ದರದಲ್ಲಿ ಮಾರಾಟ ಮಾಡಲು ಸಿದ್ಧ ಇರುವಾಗ ಬಿ.ಎಸ್.ಯಡಿಯೂರಪ್ಪ ಮತ್ತು ಶ್ರೀರಾಮುಲು ಸೇರಿಕೊಂಡು ಚೀನಾದ ಕಂಪೆನಿಯಿಂದ ರೂ.2,000ಕ್ಕೆ ಒಂದರಂತೆ ಪಿಪಿಇ ಕಿಟ್ ಗಳನ್ನು ಖರೀದಿ ಮಾಡಿರುವುದನ್ನು ದಾಖಲೆ ಸಹಿತ ಕೊರೊನಾ ಕಾಲದಲ್ಲಿಯೇ ನಾವು ಹೇಳಿದ್ದೆವು.
ಎಂದು ಕಿಡಿಕಾರಿದ್ದಾರೆ.
ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ತನಿಖಾ ಸಮಿತಿ ನೀಡಿರುವ ವರದಿಯನ್ನು ನಾನಿನ್ನೂ ಪೂರ್ತಿ ಓದಿಲ್ಲ. ನನ್ನ ಪ್ರಕಾರ ಮಾಧ್ಯಮಗಳಲ್ಲಿ ವರದಿಯಾಗಿರುವುದು ಒಂದು ‘‘ಮಂಜುಗಡ್ಡೆಯ ಒಂದು ಸಣ್ಣ ತುದಿ’’ ಮಾತ್ರ. ಒಂದು ಅಂದಾಜಿನ ಪ್ರಕಾರ ಹತ್ತರಿಂದ ಹದಿನೈದು ಸಾವಿರ ಕೋಟಿ ರೂಪಾಯಿಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ತನಿಖಾ ಸಮಿತಿ ಆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿರಬಹುದು.
ಕೊರೊನಾ ವೈರಸ್ ನಿಂದಾಗಿ ಸಂಭವಿಸಿದ ಸಾವಿನ ಬಗ್ಗೆ ಆಗಿನ ಸರ್ಕಾರ ಕೊಟ್ಟಿರುವ ಸಾವಿನ ಸಂಖ್ಯೆ ಏನೇ ಇರಬಹುದು. ನಮ್ಮ ಪ್ರಕಾರ ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಯುವಜನರು 50,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಸಾವಿಗೀಡಾಗಿದ್ದಾರೆ. ರಾಜ್ಯ ಸರ್ಕಾರ ಸಕಾಲದಲ್ಲಿ ಚಿಕಿತ್ಸೆ, ಔಷಧಿ ಮತ್ತು ಪ್ರತಿಬಂಧಕ ಕ್ರಮಗಳನ್ನು ಕೈಗೊಂಡಿದ್ದರೆ ಎಂದು ಹೇಳಿದರು.
ಜನ ಕೊರೊನಾ ವೈರಸ್ ಗಿಂತ ಹೆಚ್ಚಾಗಿ ಬಿಜೆಪಿಯ ಭ್ರಷ್ಟಾಚಾರದ ವೈರಸ್ ನಿಂದ ಸತ್ತಿದ್ದಾರೆ. ಈ ಸಾವಿಗೆ 20019 ರಿಂದ 2023ರ ವರೆಗೆ ರಾಜ್ಯದಲ್ಲಿ ಇದ್ದ ಬಿಜೆಪಿ ನೇತೃತ್ವದ ಸರ್ಕಾರವೇ ನೇರ ಹೊಣೆ ಎನ್ನುವುದರಲ್ಲಿ ಸಂಶಯವೇ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.