ಮುಂಬೈ,ನ.10(DaijiworldNews/TA):ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಹಾ ವಿಕಾಸ್ ಅಘಾಡಿ ಜತೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂದು ನಾವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಹಾರಾಷ್ಟ್ರ ಚುನಾವಣೆ ದೇಶದ ಪಾಲಿಗೆ ಅತ್ಯಂತ ಮಹತ್ವದ ಚುನಾವಣೆ. ಈ ಚುನಾವಣೆ ದೇಶದ ಭವಿಷ್ಯವನ್ನೇ ಬದಲಿಸುವ ಚುನಾವಣೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ತಂದರೆ ಮಾತ್ರ ಇಲ್ಲಿ ಉತ್ತಮ ಆಡಳಿತ ನೀಡಲು ಸಾಧ್ಯವಾಗುವುದು ಎಂದು ಹೇಳಿಕೆ ನೀಡಿದ್ದಾರೆ.
ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರಕ್ಕೆ ಬಂದರೆ ʻಮಹಾಲಕ್ಷ್ಮಿʼ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 3,000 ರೂ. ಆರ್ಥಿಕ ನೆರವು ನೀಡಲಾಗುವುದು. ಮಹಿಳೆಯರಿಗೆ ಕರ್ನಾಟಕದ ಮಾದರಿಯಲ್ಲೇ ಉಚಿತ ಬಸ್ ಸೇವೆ, 500 ರೂ. ದರದಲ್ಲಿ ವಾರ್ಷಿಕ 6 ಸಿಲಿಂಡರ್ ವಿತರಣೆ ಮಾಡಲಾಗುವುದು. ಅಲ್ಲದೇ ಮಹಿಳೆಯರ ಸುರಕ್ಷತೆಗಾಗಿ ಬಲವಾದ ಕಾನೂನುಗಳನ್ನು ರೂಪಿಸಲಾಗುವುದು, 9 ರಿಂದ 16 ವರ್ಷ ವಯಸ್ಸಿನ ಹುಡುಗಿಯರಿಗೆ ಉಚಿತ ಗರ್ಭಕಂಠದ ಕ್ಯಾನ್ಸರ್ ಲಸಿಕೆ, ಪ್ರತಿ ತಿಂಗಳು 2 ದಿನಗಳ ರಜೆ ನೀಡಲಾಗುವುದು ಎಂಬುವುದಾಗಿ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ.
ನಿರುದ್ಯೋಗಿ ಯುವಕರಿಗೆ ಮಾಸಿಕ 4,000 ರೂ. ಭತ್ಯೆ ನೀಡಲಾಗುವುದು. ಆರೋಗ್ಯ ವಿಮಾ ಪಾಲಿಸಿಯನ್ನು ವಿಸ್ತರಿಸಲಾಗುವುದು. ಸಾಮಾಜಿಕ ನ್ಯಾಯದ ಅಡಿಯಲ್ಲಿ ಜಾತಿ ಜನಗಣತಿ ಅನುಷ್ಠಾನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಪ್ರಣಾಳಿಕೆ ಬಿಡುಗಡೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಶಿವಸೇನೆ ಯುಬಿಟಿ ನಾಯಕ ಸಂಜಯ್ ರಾವತ್, ಎನ್ಸಿಪಿ ಎಸ್ಪಿ ನಾಯಕಿ ಸುಪ್ರಿಯಾ ಸುಳೆ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.