ಬೆಂಗಳೂರು, ನ.22(DaijiworldNews/AK):ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನ.13ರಂದು ನಡೆದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಶನಿವಾರ (ನ.23) ಬೆಳಗ್ಗೆ 8 ಗಂಟೆಯಿಂದ ಆರಂಭಗೊಳ ಆರಂಭಗೊಳ್ಳಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಮತ ಎಣಿಕೆಗೆ ಅವಶ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆಗೆ ಮುನ್ನ ಅಂಚೆ ಮತ ಎಣಿಕೆ ಕಾರ್ಯ ನಡೆಯಲಿದೆ. ಅಂಚೆ ಮತ ಎಣಿಕೆಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆಯು ರಾಮನಗರ ಜಿಲ್ಲೆಯ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. ಒಟ್ಟು 15 ಟೇಬಲ್ನಲ್ಲಿ ಮತಗಳ ಎಣಿಕೆ ನಡೆಯಲಿದೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆಯು ಹಾವೇರಿ ಜಿಲ್ಲೆಯ ದೇವಗಿರಿಯಲ್ಲಿರುವ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 14 ಟೇಬಲ್ ಗಳಲ್ಲಿ ಮತಗಳ ಎಣಿಕೆ ನಡೆಯಲಿದೆ.
ಸಂಡೂರು ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆಯು ಬಳ್ಳಾರಿ ಜಿಲ್ಲೆಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 14 ಟೇಬಲ್ ಗಳಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಮೂರು ಕ್ಷೇತ್ರಗಳಿಗೆ ನವೆಂಬರ್ 13 ರಂದು ಮತದಾನ ನಡೆದಿದ್ದು, ನಾಳೆ (ನ.23 ರಂದು) ಮತ ಎಣಿಕೆ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳ ನಾಯಕರ ಚಿತ್ತ ನಾಳಿನ ಚುನಾವಣಾ ಫಲಿತಾಂಶದ ಮೇಲೆ ಬಿದ್ದಿದೆ.