ಬೆಂಗಳೂರು, ನ.26(DaijiworldNews/AK): ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷವು ಹಲವಾರು ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಅಲ್ಲದೆ, ಸಂವಿಧಾನದ ದುರುಪಯೋಗ ಪಡಿಸಿಕೊಂಡು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಆಗಿದೆ ಎಂಬುದನ್ನು ದೇಶ- ರಾಜ್ಯದ ಜನರು ಮರೆತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಸಂವಿಧಾನ ದಿನಾಚರಣೆಯ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಿಂದೆ ಕಾನೂನು ದಿನವನ್ನಾಗಿ ಇದನ್ನು ಆಚರಿಸಲಾಗುತ್ತಿತ್ತು. ಇದನ್ನು ಸಂವಿಧಾನ ಸಮರ್ಪಣಾ ದಿನವಾಗಿ ಅರ್ಥಪೂರ್ಣವಾಗಿ ಆಚರಿಸುವ ಅಭಿಲಾಷೆ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರದು ಎಂದು ತಿಳಿಸಿದರು.
ನ.26ರಿಂದ ಜನವರಿ 26ರವರೆಗೆ 2 ತಿಂಗಳುಗಳ ಕಾಲ ದೇಶಾದ್ಯಂತ ಸಂವಿಧಾನ ಸನ್ಮಾನ ಅಭಿಯಾನ ಆಚರಿಸಲಾಗುತ್ತಿದೆ. ಸಂವಿಧಾನ ಒಂದು ಧರ್ಮಗ್ರಂಥ ಎಂದ ಅವರು, ಸಂವಿಧಾನಕ್ಕೆ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಹಲವಾರು ದಶಕಗಳಿಂದ ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ, ಸಂವಿಧಾನವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ. ಈ ಆಚರಣೆಯು ಕೇವಲ ನವೆಂಬರ್ 26ಕ್ಕೆ ಸೀಮಿತ ಆಗಬಾರದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ಇತಿಹಾಸವನ್ನು ಮರೆಮಾಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ಅದನ್ನು ತೊಡೆದು ಹಾಕಿ, ಡಾ. ಬಾಬಾಸಾಹೇಬ ಅಂಬೇಡ್ಕರರ ನೇತೃತ್ವದಲ್ಲಿ ರಚಿಸಿದ ಸಂವಿಧಾನಕ್ಕೆ ಸಂಪೂರ್ಣ ಗೌರವ ತಂದು ಕೊಡುವ ಪ್ರಾಮಾಣಿಕ ಕೆಲಸವನ್ನು ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.