ಬೆಳಗಾವಿ, ಡಿ.10(DaijiworldNews/AA): ರಾಜ್ಯದಲ್ಲಿ ಅತಿಥಿ ಶಿಕ್ಷಕರ ಸಂಬಳ ಹೆಚ್ಚಳಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2022 ರಲ್ಲಿ ಅತಿಥಿ ಶಿಕ್ಷಕರ ಸಂಬಳ ಹೆಚ್ಚಳ ಮಾಡಲಾಗಿದ್ದು, ಈಗ ಮತ್ತೊಮ್ಮೆ ಆರ್ಥಿಕ ಇಲಾಖೆಯ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸದಸ್ಯ ಎಸ್.ವಿ. ಸಂಕನೂರು ಪ್ರಶ್ನೆಗೆ ಉತ್ತರಿಸಿದ ಅವರು, 2013ನೇ ಸಾಲಿನ ವರೆಗೆ ಉಪನ್ಯಾಸಕರಿಗೆ ಪದೋನ್ನತಿ ನೀಡಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಕುರಿತು ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿ ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ ಇದೇ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.