ಕಾರವಾರ, ಡಿ.16(DaijiworldNews/AK): ಬುಡಕಟ್ಟು ವೇಷ ಭೂಷಣದಲ್ಲಿ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ಗಣ್ಯಾತಿ ಗಣ್ಯರ ಎದುರು ನಡೆದುಕೊಂಡು ಹೋಗಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದ ವೃಕ್ಷ ಮಾತೆ ತುಳಸಿ ಗೌಡ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಾಲಕ್ಕಿ ಸಮುದಾಯದ ತುಳಸಿಗೌಡ (86) ಇಂದು (ಡಿಸೆಂಬರ್ 16) ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ
ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ವೃಕ್ಷ ಮಾತೆ ಎಂದೇ ಪ್ರಸದ್ದಿ ಪಡೆದಿದ್ದರು. . ಹಾಲಕ್ಕಿ ಸಮುದಾಯದ ಈ ಮಹಿಳೆ, ಲಕ್ಷಾಂತರ ಮರಗಳನ್ನು ಸಾಕಿ ಬೆಳೆಸಿದ ಮಹಾ ತಾಯಿ. ಪರಿಸರವಾದಿ ತುಳಸಿ ಗೌಡ ಅವರು ಈವರೆಗೂ ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು, ಬೃಹತ್ ಕಾಡನ್ನೇ ಬೆಳೆಸಿದ್ದಾರೆ. ಕಳೆದ 60 ವರ್ಷಗಳಿಂದ ಅವರು ಪರಿಸರ ಸಂರಕ್ಷಣೆಯ ಕಾರ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
ತುಳಸಿ ಅವರ ಪರಿಸರ ಪ್ರೇಮವನ್ನು ಮೆಚ್ಚಿ 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.ಬಳಿಕ ಕಳೆದ ವರ್ಷ ಅಂದರೆ 2023ರಲ್ಲಿ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.