ಬೆಳಗಾವಿ, ಡಿ.19(DaijiworldNews/AK):ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಕಾಂಗ್ರೆಸ್ ನಾಯಕರು ಸಿಟಿ ರವಿ ವಿರುದ್ಧ ಆಕ್ರೋಶಗೊಂಡಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಬಿಗಿಪಟ್ಟು ಹಿಡಿದಿದೆ.ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಪರಿಷತ್ನಲ್ಲಿ ಇಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ.
ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.