ಬೆಂಗಳೂರು,ಜ.15(DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ಮಾಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಗುರುವಾರ (ಜನವರಿ.16) ರಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟ್ವೀಟ್ ಮಾಡಿ, “ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲ ಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಹೇಳಿದರು.
ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.