ಬೆಂಗಳೂರು, ,ಜ.30 (DaijiworldNews/AK):ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ಅವರು ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ ವಿಜಯೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ಈ ಸ್ಪಷ್ಟನೆ ನೀಡಿದರು.ಸುಧಾಕರ್ ಅವರು ನಿಮ್ಮನ್ನು ಬದಲಾಯಿಸಬೇಕೆಂದು ಆಗ್ರಹಿಸಿ ಹೈಕಮಾಂಡ್ಗೆ ದೂರು ಕೊಟ್ಟಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಏನು ಹೇಳುತ್ತೀರಿ? ಎಂಬ ಪತ್ರಕರ್ತರ ಪ್ರಶ್ನೆಗೆ, ಚುನಾವಣೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎನ್ನುವುದನ್ನು ಗೌರವಾನ್ವಿತ ಎಲ್ಲ ಹಿರಿಯರಲ್ಲಿ ತಿಳಿಸುವುದಕ್ಕೆ ಇಷ್ಟಪಡುತ್ತೇನೆ. ನಾನು ರಾಜ್ಯದ ಅಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಚುನಾವಣೆ ಸಂಬಂಧ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ. ಕೇಂದ್ರದಿಂದ ನಮ್ಮ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಚುನಾವಣೆಯ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. 13 ಜನ ವೀಕ್ಷಕರನ್ನು ಕೂಡ ನೇಮಕ ಮಾಡಿದ್ದರು. ಪ್ರತಿಯೊಬ್ಬ ವೀಕ್ಷಕರಿಗೂ ಕೂಡ ಮೂರು-ಮೂರು ಜಿಲ್ಲೆಗಳ ಜವಾಬ್ದಾರಿ ಕೂಡ ನೀಡಲಾಗಿತ್ತು ಎಂದು ವಿಜಯೇಂದ್ರ ಹೇಳಿದರು.
ಪ್ರತಿ ಜಿಲ್ಲೆಗೂ ಚುನಾವಣಾಧಿಕಾರಿ, ರಿಟರ್ನಿಂಗ್ ಆಫೀಸರ್, ಕೋರಿಟರ್ನಿಂಗ್ ಆಫೀಸರ್ ಕೂಡ ನೇಮಕಾತಿ ಆಗಿದೆ. ಅವರ ಸಮಕ್ಷಮದಲ್ಲಿ ಆಯಾ ಜಿಲ್ಲೆಗಳಲ್ಲಿ ಎಲ್ಲ ಪ್ರಮುಖರ ವಿಶ್ವಾಸಕ್ಕೆ ತೆಗೆದುಕೊಂಡು ಮೂರು ಹೆಸರುಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ. ಜಿಲ್ಲೆಯ ತಂಡದಿಂದ ಕಳುಹಿಸಿದ 3 ಹೆಸರುಗಳನ್ನು ಹೈಕಮಾಂಡ್ಗೆ ಕಳುಹಿಸಿಕೊಟ್ಟು ಅಲ್ಲಿಂದ ಅಂತಿಮ ತೀರ್ಮಾನವಾದ ಬಳಿಕ ಚುನಾವಣಾ ಪ್ರಕ್ರಿಯೆ ನಡೆದಿದೆ.
ಅಧ್ಯಕ್ಷರ ಹೆಸರುಗಳ ಘೋಷಣೆಯಾಗಿದೆ. ಈ ಪ್ರಕ್ರಿಯೆಯಲ್ಲಿ ವಿಜಯೇಂದ್ರ ಪಾತ್ರ ಶೂನ್ಯ. ನಾನು ರಾಜ್ಯದ ಅಧ್ಯಕ್ಷನಾಗಿದ್ದರೂ ಸಹ ನನ್ನ ಜಿಲ್ಲೆಯ ಬಗ್ಗೆ ಅಭಿಪ್ರಾಯ ಕೊಡಬಹುದೇ ಹೊರತು ರಾಜ್ಯದ ಬೇರೆ ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಭಿಪ್ರಾಯ ಕೊಡುವಂತಿಲ್ಲ. ನನಗೂ ಆ ಅಧಿಕಾರವಿಲ್ಲ ಎಂದು ಅವರು ತಿಳಿಸಿದರು.
ನಾನು ಯಾರನ್ನೂ, ಸುಧಾಕರ್ ಅವರನ್ನು ಕೂಡ ದೂಷಿಸುವುದಿಲ್ಲ. ಈ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅವರಿಗೆ ಗೊಂದಲವಿದೆ. ಇಡೀ ದೇಶದಲ್ಲಿ ಪಕ್ಷದ ಸಂಘಟನಾತ್ಮಕ ಚುನಾವಣೆ ಇದೇ ರೀತಿಯಲ್ಲಿ ನಡೆಯುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಹಾಗೆಯೇ ನಡೆದಿದೆ. ಹೊಸದಾಗಿ ಯಾವುದೇ ಪ್ರಕ್ರಿಯೆ ಮಾಡಲು ನನಗೆ ಅಧಿಕಾರವಿಲ್ಲ. ಕೇಂದ್ರ ಎಲ್ಲವನ್ನೂ ಗಮನಿಸುತ್ತಿದೆ. ಮಾನ್ಯ ಸುಧಾಕರ್ ಅವರ ಆಕ್ರೋಶಭರಿತ ಮಾತುಗಳನ್ನು ನಾನು ಕೇಳಿದ್ದೇನೆ. ವಿಜಯೇಂದ್ರ ಅವರು ನಮ್ಮನ್ನು ಸಮಾಧಿ ಮಾಡಲು ಹೊರಟಿದ್ದಾರೆ ಅನ್ನುವ ಮಾತನ್ನು ಹೇಳಿದ್ದಾರೆ. ಈ ರೀತಿ ಹೇಳಿಕೆಗಳನ್ನು ದಯವಿಟ್ಟು ಕೊಡಬೇಡಿ. ಅದು ನಿಮಗೂ, ನನಗೂ ಗೌರವ ತರುವುದಿಲ್ಲ. ಅಲ್ಲಿ ಆಯ್ಕೆಯಾದವರು ಕೂಡ ಪಕ್ಷದ ಒಬ್ಬ ಕಾರ್ಯಕರ್ತ. ಮತ್ತೆ ಸುಧಾಕರ್ ಅವರ ಸಂಬಂಧಿ ಕೂಡ ಹೌದು. ಚುನಾವಣಾ ಪ್ರಕ್ರಿಯೆಯನ್ನು ಅವರು ಅರ್ಥ ಮಾಡಿಕೊಳ್ಳಲಿ ಎಂದು ಸುಧಾಕರ್ ಆರೋಪಕ್ಕೆ ಪ್ರತ್ಯುತ್ತರ ಕೊಟ್ಟರು.