ಬೆಂಗಳೂರು, ಫೆ.07 (DaijiworldNews/AA): ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಗೃಹಲಕ್ಷ್ಮಿ ಹಣ ಪಾವತಿ ಆಗಲಿದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ ಎಂದು ತಿಳಿದುಬಂದಿದೆ.

ಚುನಾವಣೆ ವೇಳೆ ಕಾಂಗ್ರೆಸ್ ಪ್ರಕಟಿಸಿದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕಾರ್ಯವಿಧಾನದಲ್ಲೇ ಮಹತ್ವದ ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಆದರೆ ಇನ್ನು ಮುಂದೆ ತಾಲೂಕು ಪಂಚಾಯಿತಿಯಿಂದ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ತಲುಪಲಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿ ನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ. ಈ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಬದಲಾವಣೆ ಮಾಡಲು ಇಲಾಖೆ ಮುಂದಾಗಿದೆ ಎನ್ನಲಾಗಿದೆ.
ಈಗಾಗಲೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಾವತಿಸಿಲ್ಲ. ಈಗ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.