ನವದೆಹಲಿ, ಫೆ.16 (DaijiworldNews/AA): ದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
img src=https://daijiworld.ap-south-1.linodeobjects.com/Linode/img_tv247/AA-160225-train.jpg>
ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮೃತಪಟ್ಟವರ ಪೈಕಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ನವದೆಹಲಿ ರೈಲು ನಿಲ್ದಾಣ ತುಂಬಿ ಹೋಗಿತ್ತು. ಹೀಗಾಗಿ 2 ವಿಶೇಷ ರೈಲುಗಳನ್ನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ರೈಲುಗಳು ತಡವಾಗಿ ನಿಲ್ದಾಣ ತಲುಪಿದೆ. ಇದರಿಂದಾಗಿ ರೈಲು ನಿಲ್ದಾಣದಲ್ಲಿ ಏಕಾಏಕಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ.
ಇದೇ ವೇಳೆಗೆ ಪ್ಲಾಟ್ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ ರಾಜ್ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಪರಿಣಾಮ ರೈಲಿನ ಒಳಗೆ ಮತ್ತು ಹೊರಗೆ ಕಾಲ್ತುಳಿತ ಸಂಭವಿಸಿ 18 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.