ನವದೆಹಲಿ, ಫೆ.18 (DaijiworldNews/AK): ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ನೇಮಕ ಮಾಡಿರುವುದು ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಜ್ಞಾನೇಶ್ ಕುಮಾರ್ ಅವರ ತಡರಾತ್ರಿ ನೇಮಕವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಈ ನಿರ್ಧಾರವನ್ನು ಅಗೌರವ ಮತ್ತು ಅಸಭ್ಯವಾದುದು ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯ ಸಭೆ ನಡೆದ ಕೆಲವೇ ಗಂಟೆಗಳ ಬಳಿಕ ಸೋಮವಾರ ತಡರಾತ್ರಿ ಕೇಂದ್ರ ಸರ್ಕಾರ ಜ್ಞಾನೇಶ್ ಕುಮಾರ್ ಅವರನ್ನು ಹೊಸ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿತ್ತು.
ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ರೂಪಿಸಲಾಗಿರುವ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವವರೆಗೆ ಹೊಸ ಸಿಇಸಿ ನೇಮಕ ನಿರ್ಧಾರವನ್ನು ಮುಂದೂಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದರು. ಸುಪ್ರೀಂ ಕೋರ್ಟ್ ಬುಧವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ. ಆದರೆ, ಅಷ್ಟರೊಳಗೆ ನೂತನ ಚುನಾವಣಾ ಆಯುಕ್ತರನ್ನು ನೇಮಕ ಮಾಡಲಾಗಿದೆ.
ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಆಯ್ಕೆ ಸಮಿತಿ ಸಭೆಗೆ ನನ್ನ ಒಪ್ಪಿಗೆಯಿಲ್ಲ ಎಂದು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ ಎಂದರು.