ನವದೆಹಲಿ, ಮಾ.21(DaijiworldNews/AK):ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆ ಮತ್ತು ಅಪರಾಧಗಳ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ತಂದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಭಯೋತ್ಪಾದಕ ಘಟನೆಗಳು ಗಮನಾರ್ಹ ಇಳಿಕೆ ದರವನ್ನು ಕಂಡಿವೆ ಎಂದು ಹೇಳಿದರು.
ಇಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಗೆ ಉತ್ತರಿಸಿದ ಗೃಹ ಸಚಿವ ಅಮಿತ್ ಶಾ, “ಸಂವಿಧಾನವು ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿಯನ್ನು ರಾಜ್ಯಗಳಿಗೆ ನೀಡಿದೆ. ಗಡಿ ಭದ್ರತೆ ಮತ್ತು ಆಂತರಿಕ ಭದ್ರತೆ ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತವೆ. ಇದು ಸರಿಯಾದ ನಿರ್ಧಾರ. ಇದರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ಅಗತ್ಯವಿಲ್ಲ ಎಂದರು.
10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೃಹ ಸಚಿವಾಲಯಕ್ಕೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಬದಲಾವಣೆಗಳನ್ನು ಮಾಡಿದ್ದಾರೆ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ” ಎಂದು ಹೇಳಿದ್ದಾರೆ. 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಮೋದಿ ಸರ್ಕಾರವು ಸಂವಿಧಾನ ರಚನಾಕಾರ ಅಂಬೇಡ್ಕರ್ ಅವರ ‘ಒಂದು ಸಂವಿಧಾನ, ಒಂದು ಧ್ವಜ’ದ ಕನಸನ್ನು ನನಸಾಗಿಸಿದೆ ಎಂದು ಅಮಿತ್ ಶಾ ಹೇಳಿದರು.