ನವದೆಹಲಿ, ಮಾ.28(DaijiworldNews/AK) :ದೇಶದಾದ್ಯಂತ ಯಾವುದೇ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂಬ ಮಹತ್ತರ ತೀರ್ಪನ್ನು ದೆಹಲಿ ಹೈಕೋರ್ಟ್ ಶುಕ್ರವಾರ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎತ್ತಿ ಹಿಡಿದಿದೆ.

ಹೋಟೆಲ್ಗಳಲ್ಲಿ ಮತ್ತು ರೆಸ್ಟೋರೆಂಟ್ಗಳಲ್ಲಿ ವಿಧಿಸಲಾಗುತ್ತಿದ್ದ ಸೇವಾ ಶುಲ್ಕ ನಿಷೇಧಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(ಸಿಸಿಪಿಎ) 2019ರ ಕಾನೂನಿನ ಅನ್ವಯ ಈ ಹಿಂದೆ ಮಾರ್ಗಸೂಚಿ ಹೊರಡಿಸಿತ್ತು.
ಆದರೆ, ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ(ಎನ್ಆರ್ಆಐ) ಮತ್ತು ಫೆಡರೇಶನ್ ಆಫ್ ಹೋಟೆಲ್, ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಘಟನೆಗಳು ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದವು.
ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್, ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಹೊರಡಿಸಿದ್ದ ಸೇವಾ ಶುಲ್ಕ ನಿಷೇಧ ಮಾರ್ಗಸೂಚಿ ಮತ್ತು ಹೋಟೆಲ್, ರೆಸ್ಟೋರೆಂಟ್ ಅಸೋಸಿಯೇಷನ್ ವಾದವನ್ನು ಆಲಿಸಿ ಅಂತಿಮವಾಗಿ ಸಿಸಿಪಿಎ (CCPA) ಹೊರಡಿಸಿದ ಮಾರ್ಗಸೂಚಿಯನ್ನು ಎತ್ತಿ ಹಿಡಿದು ತೀರ್ಪು ಪ್ರಕಟಿಸಿದೆ.