ನವದೆಹಲಿ, ಮೇ. 03 (DaijiworldNews/AA): ಜಮ್ಮು ಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ತೆಗೆದುಕೊಂಡಿದ್ದು, ಪಾಕ್ನಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ.
ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸಲಾಗುವುದು. ಹೊಸ ನಿಬಂಧನೆಯನ್ನು ವಿದೇಶಿ ವ್ಯಾಪಾರ ನೀತಿ 2023ಗೆ ಸೇರಿಸಲಾಗಿದೆ. ಈ ನಿಯಮವನ್ನು ತಕ್ಷಣವೇ ಜಾರಿಗೆ ತರಲಾಗುವುದು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮೇ 2ರ ಅಧಿಸೂಚನೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ಈ ನಿಷೇಧಕ್ಕೆ ಯಾವುದೇ ವಿನಾಯಿತಿ ನೀಡಬೇಕಾದರೆ ಭಾರತ ಸರ್ಕಾರದ ಅನುಮೋದನೆಯ ಅಗತ್ಯವಿರುತ್ತದೆ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.