ಹುಬ್ಬಳ್ಳಿ, ಮೇ. 05 (DaijiworldNews/AA): 'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಮಂಗಳೂರಿನಲ್ಲಿ ಅತಿ ಹೆಚ್ಚು ಕೋಮು ಪ್ರಚೋದಕ ಕೊಲೆ ಪ್ರಕರಣಗಳು ನಡೆದಿರುತ್ತವೆ. ಸರ್ಕಾರ ತಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಒಂದು ವರ್ಗ ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೃತ್ಯ ಎಸಗುತ್ತಿದೆ' ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಕೊಲೆ ಹಾಗೂ ಗಲಭೆಗಳು ನಡೆಯುತ್ತವೆ. ಗಲಭೆ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೂಡ ರದ್ದು ಮಾಡಲಾಗುತ್ತದೆ. ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ಪ್ರಕರಣವೇ ಇದಕ್ಕೆ ನಿದರ್ಶನವಾಗಿದೆ. ತಾವು ಏನೇ ಮಾಡಿದರೂ, ಕಾಂಗ್ರೆಸ್ ತಮ್ಮ ರಕ್ಷಣೆಗೆ ಇದೆ ಎಂದು ಭಾವಿಸಿರುವುದರಿಂದ, ಇಂತಹ ಪ್ರಕರಣಗಳು ಆಗಾಗ ಮರುಕಳಿಸುತ್ತಿರುತ್ತವೆ' ಎಂದರು.
'ಕಾಶ್ಮೀರದ ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನದ ವಿರುದ್ಧ ಕೈಗೊಳ್ಳಬೇಕಾದ ತುರ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿದ್ದು, ಅಲ್ಲಿ ತೀವ್ರ ಸಮಸ್ಯೆ ಸೃಷ್ಟಿಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಒಬ್ಬಂಟಿ ಮಾಡುವ ಯತ್ನವೂ ನಡೆಯುತ್ತಿದೆ. ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಸೂಕ್ತ ಸಮಯದಲ್ಲಿ ಉತ್ತರ ದೊರೆಯಲಿದೆ. ಕಾಲಮಿತಿ ಹಾಕಿಕೊಂಡು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ' ಎಂದು ತಿಳಿಸಿದರು.