ಬೆಂಗಳೂರು, ಜೂ. 25 (DaijiworldNews/AA): ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಹೊರತುಪಡಿಸಿ ಬೇರೆ ಕಡೆಗಳಲ್ಲಿ ಅಷ್ಟೊಂದು ಮಳೆಯಾಗಿರಲಿಲ್ಲ. ಇದೀಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.