ಬೆಂಗಳೂರು, ಆ. 11 (DaijiworldNews/AK): ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾತನಾಡಿದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ಆರೋಪಿಸಿದರು.
ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ; ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು.
ಇವೆಲ್ಲ ವಿಷಯಗಳನ್ನು ಸದನದ ಒಳಗೆ ಪ್ರಸ್ತಾಪಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹೊಣೆಗೇಡಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದು ತಿಳಿಸಿದರು. ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರು, ಬಿಜೆಪಿ- ಜೆಡಿಎಸ್ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.